ಚಿಕ್ಕಮಗಳೂರು, ಆ. 14 : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ಇಂದು ಚಿಕ್ಕಮಗಳೂರು ನಗರದ ಕಲ್ಯಾಣನಗರದಲ್ಲಿ ನಡೆದಿದೆ.
ಆಲ್ಲೂರು-ಆವುತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ನಿಶದ್ (14) ಆತ್ಮಹತ್ಯೆಗೆ ಯತ್ನಿಸಿದ ಬಾಲಕ. ಮಲಗಿದ್ದ ಕೋಣೆಯಲ್ಲೇ ಬಟ್ಟೆ ಒಣಗಿಸಲು ಕಟ್ಟಿದ್ದ ದಾರದಿಂದ ನೇಣು ಬಿಗಿದುಕೊಂಡಿದ್ದಾನೆ ಎನ್ನಲಾಗಿದೆ.
ಘಟನೆ ಗಮನಿಸಿದ ಇತರೆ ವಿದ್ಯಾರ್ಥಿಗಳು ಕೂಡಲೇ ಆತನನ್ನು ರಕ್ಷಿಸಿ ಕೆಳಗಿಳಿಸಿದ್ದಾರೆ. ಬಳಿಕ ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಬಾಲಕನ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಗ್ಲುಕೋಸ್ ಹಾಗೂ ವೆಂಟಿಲೇಟರ್ ನೆರವಿನೊಂದಿಗೆ ಆತನನ್ನು ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ.
ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು ಎಂಬುದು ತತ್ ಕ್ಷಣಕ್ಕೆ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ತನಿಖೆ ಮುಂದುವರಿದಿದೆ.




