ಬೆಳ್ತಂಗಡಿ, ಆ. 02 : ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಮೃತ ದುರ್ದೈವಿ ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎನ್ನುವವರಾಗಿದ್ದಾರೆ.
ಎಂದಿನಂತೆ ಕೆಲಸಕ್ಕೆ ತೆರಳಿದ್ದ ಬಾಲಕೃಷ್ಣ ಗೌಡ ಅವರು ಸಂಜೆ ಮನೆಗೆ ವಾಪಾಸಾಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ ಎಂದು ಶಂಕಿಸಲಾಗಿದೆ. ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸುತ್ತಿದ್ದ ವೇಳೆ ಪ್ಲಾಸ್ಟಿಕ್ ರೈನ್‌ಕೋಟ್ ದಾರಿಯ ಮಧ್ಯೆ ಬಿದ್ದಿರುವುದು ಕಂಡು ಬಂದಿದ್ದು, ಅನತಿ ದೂರದಲ್ಲೇ ಕಾಡಾನೆಯ ಹೆಜ್ಜೆ ಗುರುತುಗಳು ಕಂಡುಬಂದಿದೆ.
ಕಾಡಾನೆ ದಾಳಿ ನಡೆಸಿರುವ ಶಂಕೆಯಲ್ಲೇ ಸುತ್ತಮುತ್ತ ಹುಡುಕಾಟ ನಡೆಸುತ್ತಿದ್ದ ವೇಳೆ ಮೃತದೇಹ ಪತ್ತೆಯಾಗಿದೆ.ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

