ಬೆಂಗಳೂರು, ಜ. 17 : ಧರ್ಮಸ್ಥಳದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳ ಸಂಬಂಧ ಪ್ರತ್ಯೇಕ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಕುರಿತು ತನ್ನ ನಿಲುವು ತಿಳಿಸುವಂತೆ ಹೈಕೋರ್ಟ್, ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.
ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ತಾಯಿ ಕುಸುಮವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಹಾಗೂ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತು.
ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿಪ್ರಸ್ತಾಪಿಸಲಾಗಿರುವ ವಿಷಯದ ಬಗ್ಗೆ ಸರಕಾರದಿಂದ ಮಾಹಿತಿ ಪಡೆದು ನಿಲುವು ತಿಳಿಸುವಂತೆ ವಕೀಲರಿಗೆ ಸೂಚನೆ ನೀಡಿ ವಿಚಾರಣೆಯನ್ನು ಫೆ.3ಕ್ಕೆ ಮುಂದೂಡಿತು. ಇದಕ್ಕೂ ಮುನ್ನ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಸ್.ಬಾಲನ್, ‘ಧರ್ಮಸ್ಥಳ ಪೋಲೀಸ್ ಠಾಣೆ ವ್ಯಾಪ್ತಿಯೊಂದರಲ್ಲೇ 74 ಅಸಹಜ ಸಾವುಗಳು ಸಂಭವಿಸಿರುವುದಾಗಿ ವರದಿಯಾಗಿದೆ. ಈ ಪ್ರಕರಣಗಳ ತನಿಖೆ ನಡೆಸಲು ರಾಜ್ಯ ಸರಕಾರ ಎಸ್‌ಐಟಿ ರಚಿಸಿದೆ. ಆದರೆ, ಎಸ್‌ಐಟಿ ಕೇವಲ ಒಂದು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದೆ. ಉಳಿದ ನಾಪತ್ತೆ, ಸಾವು, ಕೊಲೆ ಪ್ರಕರಣಗಳಿಗೆ ಪ್ರತ್ಯೇಕ ಎಫ್‌ಐಆರ್‌ದಾಖಲಿಸಿಲ್ಲ. ಇದು ಸರಿಯಾದ ಕ್ರಮವಲ್ಲ’ ಎಂದರು.
ವಿಚಾರಣೆ ಮುಂದೂಡಿಕೆ
ರಾಜ್ಯ ಸರಕಾರದ ಪರ ವಕೀಲರು, ಅರ್ಜಿಯಲ್ಲಿ ರಾಜ್ಯ ಸರಕಾರವನ್ನು ಪ್ರತಿವಾದಿಯನ್ನಾಗಿಸಿಲ್ಲ. ಅರ್ಜಿಯ ಪ್ರತಿ, ಸಂಬಂಧಿಸಿದ ದಾಖಲೆಗಳನ್ನೂ ನಮಗೆ ಒದಗಿಸಿಲ್ಲಎಂದು ನ್ಯಾಯಪೀಠಕ್ಕೆ ತಿಳಿಸಿದರು. ಆಗ ನ್ಯಾಯಪೀಠ, ಇಂದೇ ಅರ್ಜಿಯ ಪ್ರತಿಯನ್ನು ಸರಕಾರಿ ವಕೀಲರಿಗೆ ಒದಗಿಸುವಂತೆ ವಕೀಲರಿಗೆ ಸೂಚಿಸಿತಲ್ಲದೆ, ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿರುವ ವಿಷಯಗಳ ಕುರಿತು ಸರಕಾರದಿಂದ ಮಾಹಿತಿ ಪಡೆದು ನ್ಯಾಯಾಲಯಕ್ಕೆ ನಿಲುವು ತಿಳಿಸುವಂತೆ ಸರಕಾರಿ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

