ಬೆಂಗಳೂರು : ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿ ಆದೇಶ ಮಾಡಿದೆ. ಈ ವರ್ಷಾಂತ್ಯಕ್ಕೆ ಅವಧಿ ಕೊನೆಗೊಳ್ಳಲಿರುವ ರಾಜ್ಯದ 47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯಿತಿಗಳೂ ಸೇರಿ ಒಟ್ಟು 187 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲು ಜತೆಗೆ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳ ಅಂತಿಮ ಮೀಸಲು ಅಧಿಸೂಚನೆ ಹೊರಡಿಸುವ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಅವಧಿ ಮುಗಿಯಲಿರುವ ರಾಜ್ಯದ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸಲು ಅನುವಾಗುವಂತೆ ವಾರ್ಡ್‌ವಾರು ಮೀಸಲಾತಿ ಜೊತೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ನಿರ್ದೇಶಿಸಬೇಕು ಎಂದು ಕೋರಿದ್ದ ಅರ್ಜಿಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಮಾಡಿದೆ. 187 ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿತು. ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಲಾಗಿದೆ.

