ಬೆಳ್ತಂಗಡಿ, ಆ. 03 : ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಆ. 3ರಂದು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಅಧಿಕಾರಿಗಳ ತುರ್ತು ಸಭೆ ನಡೆಯಿತು.
ಮಳೆಯಿಂದ ತಾಲೂಕಿನ ಸದ್ಯದ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಶೀಘ್ರವೇ ಸಮಗ್ರ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕಾರ್ಯಾಚರಣೆ, ಪರಿಹಾರ ವ್ಯವಸ್ಥೆ ಮಾಡಬೇಕಿದೆ ಎಂದರು. ಅಲ್ಲದೆ, ಮಳೆಗಾಲ ಕಳೆಯುವವರೆಗೆ ಅಧಿಕಾರಿಗಳು ತಾಲೂಕಿನಲ್ಲೇ ಇದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ತಡ ಮಾಡಬಾರದೆಂದು ನಿರ್ದೇಶನ ನೀಡಿದರು.

ರಸ್ತೆ ವಿಚಾರ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಲ್ಲಿ ಯಾವುದೇ ರಾಜಿಯಿಲ್ಲ
ಭಾರಿ ಮಳೆಯಿಂದಾಗಿ ತಾಲೂಕಿನ ಗ್ರಾಮೀಣ ಭಾಗಗಗಳಲ್ಲಿ ಚರಂಡಿ ನಿರ್ವಹಣೆ ಸರಿಯಿಲ್ಲದೆ, ನೀರು ರಸ್ತೆಯಲ್ಲೇ ಹರಿದು ರಸ್ತೆಗಳು ಭಾಗಶ: ಹಾನಿಯಾಗಿದೆ. ಈ ಬಗ್ಗೆ ಮುಂಜಾಗೃತ ಕ್ರಮ ಕೈಗೊಳ್ಳುವುದಕ್ಕೆ ಯಾಕೆ ವಿಫಲವಾಗಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಶಾಸಕರು, ತಕ್ಷಣವೇ ಈ ಬಗ್ಗೆ ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಬೇಕು. ಅಲ್ಲದೆ, ಮಳೆಗಾಲದ ಬಳಿಕ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು. ಅನಿವಾರ್ಯವಿದ್ದಲ್ಲಿ, ಮರು ಡಾಮರೀಕರಣದ ಬದಲು ಕಾಂಕ್ರಿಟ್ ರಸ್ತೆ ನಿರ್ಮಾಣದ ಯೋಜನೆಯನ್ನು ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಈಗಾಗಲೇ ಎಲ್ಲಾ ರಸ್ತೆಗಳ ಸಮಗ್ರ ವರದಿಯನ್ನು ಸಿದ್ಧಪಡಿಸಿದ್ದೇವೆ, ಕೆಲವೊಂದಷ್ಟು ಅನುದಾನಗಳೂ ಬಂದಿದೆ. ಈ ಬಗ್ಗೆ ಸಮಗ್ರ ಯೋಜನೆ ರೂಪಿಸಿ, ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.
ತಾಲೂಕಿನ ಹಲವಾರು ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಹಾನಿಯಾಗಿದ್ದು, ಸೂಕ್ರ ಕ್ರಮವನ್ನು ಕೈಗೊಳ್ಳಬೇಕಿದೆ. ಯಾವ ಕೊಠಡಿಗಳು ಅಪಾಯದಲ್ಲಿದೆಯೋ ಅಂತಹ ಕೊಠಡಿಗಳಲ್ಲಿ ತರಗತಿಗಳು ನಡೆಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಅಲ್ಲದೆ ಅದಕ್ಕೆ ಬೇಕಾದ ಪರಿಹಾರ ವ್ಯವಸ್ಥೆಯನ್ನೂ ಕಲ್ಪಿಸಬೇಕು ಎಂದು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಸೂಕ್ರ ಪರಿಶೀಲನೆಯನ್ನು ನಡೆಸಿ ಈಗಾಗಲೇ ಕ್ರಮ ಕೈಗೊಂಡಿದ್ದೇವೆ, ನಿರಂತರವಾಗಿ ಶಾಲೆ ಹಾಗೂ ಅಂಗನವಾಡಿ ಶಿಕ್ಷಕಿಯರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದರು.

ತಾಲೂಕಿನಲ್ಲಿ ಸದೃಢ ರಸ್ತೆ ನಿರ್ಮಾಣ ಹಾಗೂ ಶಾಲೆ, ಅಂಗನವಾಡಿ ಕಟ್ಟಡಗಳ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಬೇಕು. ಯಾವ ರೀತಿಯ ಯೋಜನೆಗಳು ಬೇಕೋ ಅದರ ವರದಿಯನ್ನು ಶೀಘ್ರದಲ್ಲೇ ನೀಡಿ. ರಸ್ತೆ ವಿಚಾರ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಲ್ಲಿ ಯಾವುದೇ ರಾಜಿಯಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಇನ್ನು, ತಾಲೂಕಿನ ಹಲವು ಭಾಗಗಳಲ್ಲಿ ಮನೆಗಳಿಗೂ ಹಾನಿಯಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಒಂದೆರಡು ದಿನಗಳಲ್ಲಿ ವರದಿಯನ್ನು ಸಿದ್ಧಪಡಿಸಿ ಎಂದು ಸೂಚನೆ ನೀಡಿದರು.
ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕಾರ್ಯಾಚರಣೆ, ಪರಿಹಾರ ವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯ ಕುರಿತು ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ಅಧಿಕಾರಿಗಳಿಗೆ ಶಾಸಕರು ನೀಡಿದರು.
ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ತಹಶೀಲ್ದಾರ್ ಎಸ್. ಎನ್. ನರಗುಂದ, ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಶೌರ್ಯ ವಿಪತ್ತು ನಿರ್ವಹಣಾ ತಂಡ ಸೇರಿದಂತೆ ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲ ತಂಡಗಳ ಮುಖ್ಯಸ್ಥರು ಉಪಸ್ಥಿತರಿದ್ದರು.




