ನವದೆಹಲಿ, ಜು. 29 : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿಗೆ ಬುಧವಾರ ಲೋಕಸಭೆ ಒಪ್ಪಿಗೆ ನೀಡಿದೆ. ತಿದ್ದುಪಡಿಯಲ್ಲಿ ಆರೋಪಿಗಳಿಗೆ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಹಾಗೂ ₹ 50 ಲಕ್ಷದ ವರೆಗೆ ದಂಡ ವಿಧಿಸುವ ಅವಕಾಶ ಇದೆ.
ವಿರೋಧ ಪಕ್ಷಗಳ ಘೋಷಣೆಯ ನಡುವೆ ತಿದ್ದುಪಡಿ ಮಸೂದೆಗೆ ಧ್ವನಿಮತ ಒಪ್ಪಿಗೆ ಸಿಕ್ಕಿತು.
ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಜುಲೈ 27ರಂದು ಮಸೂದೆಯನ್ನು ಸದನದಲ್ಲಿ ಮಂಡಿಸಿದ್ದರು.
ಇದನ್ನೂ ಓದಿ:ಶಿಕ್ಷಕರ ನೇಮಕ ಪ್ರಶ್ನೆ ಪತ್ರಿಕೆ ಸೋರಿಕೆ: ₹1.2 ಕೋಟಿ ವಸೂಲಿ ಮಾಡಿದ ಆರೋಪಿ ಬಂಧನ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಇತ್ತೀಚೆಗೆ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿದ್ದರಿಂದ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಪಶ್ನೆ ಪತ್ರಿಕೆ ಸೋರಿಕೆಗೆ ಕಠಿಣ ಶಿಕ್ಷೆ ನೀಡುವ ತಿದ್ದುಪಡಿ ಮಸೂದೆಗೆ ಲೋಕಸಭೆ ಅಂಗೀಕಾರ ನೀಡಿದೆ.
ಲೋಕಸಭೆಯಲ್ಲಿ ಮಾತನಾಡಿದ ಜಿತೇಂದ್ರ ಸಿಂಗ್, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸರ್ಕಾರ ತ್ವರಿತವಾಗಿ ಕ್ರಮ ಕೈಗೊಂಡಿದೆ. 2024ರಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಕಾಯ್ದೆ ಜಾರಿಗೆ ಬಂದ ನಂತರ ಒಟ್ಟು 52 ಎಫ್‌ಐಆರ್‌ಗಳು ದಾಖಲಾಗಿವೆ ಎಂದು ತಿಳಿಸಿದರು.
ಅನುಭವದಿಂದ ಪಾಠ ಕಲಿಯಲು ಸರ್ಕಾರ ಸಿದ್ಧವಿದ್ದು, ಅದಕ್ಕಾಗಿಯೇ ಈ ತಿದ್ದುಪಡಿಯನ್ನು ತರಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಆತ್ಮಹತ್ಯೆಗಳ ಪ್ರಮಾಣವೂ ಕಳೆದ ಕೆಲವು ವರ್ಷಗಳಲ್ಲಿ ಕಡಿಮೆಯಾಗಿದೆ ಎಂದು ಹೇಳಿದರು.
ಇದೇ ವೇಳೆ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಜಿತೇಂದ್ರ ಸಿಂಗ್, ಅವರಿಗೆ ಸಂಸದೀಯ ಸಂಪ್ರದಾಯಗಳು ಮತ್ತು ಸರ್ಕಾರದ ಕಾರ್ಯವೈಖರಿಯ ಬಗ್ಗೆ ಸಮರ್ಪಕ ಅರಿವಿಲ್ಲ ಎಂದು ಟೀಕಿಸಿದರು.
ಮಸೂದೆ ಅಂಗೀಕಾರವಾದ ತಕ್ಷಣ, ಲೋಕಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.


