ಉಡುಪಿ, ಆ. 08 : ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ ಸಂಜೆ ಉದ್ಯಮಿಯೊಬ್ಬರನ್ನು ಹಾಡಹಗಲೇ ಭೀಕರವಾಗಿ ಹತ್ಯೆಗೈದಿದ್ದ ಪ್ರಕರಣಕ್ಕೆ ಕುರಿತಂತೆ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧನ ಮಾಡಿದ್ದಾರೆ. ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ಮಾಡಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಡೇವಿಡ್ ಡಿಸೋಜ (55) ಎಂಬುವವರನ್ನು ಶುಕ್ರವಾರ ಅಪರಾಹ್ನ 3.50 ರ ವೇಳೆಗೆ ಮುಂದರಂಗಡಿಯ ಚರ್ಚ್ ಎದುರಲ್ಲೇ ಕೊಲೆ ಮಾಡಲಾಗಿತ್ತು. ಡೇವಿಡ್ ಅವರು ವಾಹನ ಏರಲು ಮುಂದಾಗುತ್ತಿದ್ದಂತೆಯೇ ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ದಾಳಿ ಮಾಡಿ ಹತ್ಯೆ ನಡೆಸಿ ಪರಾರಿಯಾಗಿದ್ದರು.
ಘಟನೆ ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ರಾಜು ಎಂಬ ಆರೋಪಿಯನ್ನು ಬಂಧನ ಮಾಡಿದ್ದರು. ಈ ವೇಳೆ ಬೈಂದೂರು ಸಮೀಪದ ಒತ್ತಿನೆಣೆ ಬಳಿ ಆರೋಪಿ ರಾಜು ಪೊಲೀಸರ ಮೇಲೆಯೇ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾನೆ. ಕೂಡಲೇ ಜಾಗರೂಕರಾದ ಕಾಪು ಪಿಎಸ್‌ಐ ತೇಜಸ್ವಿ ಅವರು ತಮ್ಮ ಸರ್ವಿಸ್ ಪಿಸ್ತೂಲ್‌ನಿಂದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಪಿಎಸ್‌ಐ ತೇಜಸ್ವಿ ಅವರಿಗೂ ಗಾಯಗಳಾಗಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪಿಎಸ್‌ಐ ಆರೋಗ್ಯ ವಿಚಾರಿಸಿದ್ದಾರೆ.
ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೋರ್ವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ.



